ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮದಲ್ಲಿ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್ ಪೌಲ್ ನೇರವಾಗಿ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ನಿಟ್ಟಿನಲ್ಲಿ ಅವರನ್ನು ಸಿಐಡಿ ಅಧಿಕಾರಿಗಳು ಮೂರು ಬಾರಿ ವಿಚಾರಣೆಗೆ ಒಳಪಡಿಸಿದ್ದರು. ಇಂದು ಬೆಳಿಗ್ಗೆ ನಾಲ್ಕನೇ ಬಾರಿಗೆ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾದ ಅಮೃತ್ ಪೌಲ್ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಅಕ್ರಮದಲ್ಲಿ ಭಾಗಿಯಾಗಿರುವ ಬಗ್ಗೆ ಅಮೃತ್ ಪೌಲ್ ವಿರುದ್ಧ ಸಾಕಷ್ಟು ಸಾಕ್ಷಾಧಾರಗಳು ಲಭ್ಯವಾಗಿರುವ ಹಿನ್ನೆಲೆಯಲ್ಲಿ ಅಮೃತ್ ಪೌಲ್ ಅವರನ್ನು ಬಂಧಿಸಲಾಗಿದೆ. ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಹುದ್ದೆಯಲ್ಲಿರುವ ಅಧಿಕಾರಿಯೊಬ್ಬರನ್ನು ಬಂಧಿಸಿರುವುದು ಇದೇ ಮೊದಲು ಎನ್ನಲಾಗಿದೆ.