ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಮಳೆ ಅವಾಂತರದಿಂದಾಗಿ ಕಾಲೇಜು ಕಾಂಪೌಂಡ್ ಕುಸಿದು ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ನಿರಂತರ ಮಳೆಯಿಂದಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರಿ ಮಳೆಯ ಪರಿಣಾಮ ಮೂಡಬಿದ್ರೆಯಲ್ಲಿ ಮೈಟ್ ಕಾಲೇಜು ಕಾಂಪೌಂಡ್ ಕುಸಿದು ಬಿದ್ದಿದ್ದು, ರಸ್ತೆಯಲ್ಲಿ ನಿಂತಿದ್ದ ಮೂರು ಕಾರುಗಳು ಜಖಂಗೊಂಡಿವೆ.
ಕಾರಿನಲ್ಲಿ ಯಾರೂ ಇರಲಿಲ್ಲವಾದ್ದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ, ಹಲವೆಡೆ ಸೇತುವೆಗಳು ಮುಳುಗಡೆಯಾಗಿದ್ದು, ವಿದ್ಯುತ್ ಸಂಪರ್ಕ ಕೂಡ ಕಡಿತಗೊಂಡಿದೆ.