ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಜುಲೈ 14 ವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಜನರು ನಿರಂತರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಹಲವೆಡೆ ಭೂಕುಸಿತ, ಗುಡ್ಡ ಕುಸಿತಗಳಿಂದ ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ. ಇನ್ನೂ ಮೂರು ದಿನಗಳ ಕಾಲ ಸತತವಾಗಿ ಮಳೆಯಾದರೆ ನದಿಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 13ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಕೂಡ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಪ್ರವಾಸಿಗರು ಕಡಲತಡಿಯತ್ತ ಸಾಗದಂತೆ ಮಲ್ಪೆಯಲ್ಲಿ ಬಲೆ ಹಾಕಲಾಗಿದೆ. ಉತ್ತರ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ಚಿತ್ರದುರ್ಗ, ದಾವಣಗೆರೆ, ತುಮಕೂರು, ಮೈಸೂರು ಜಿಲ್ಲೆಗಳಲ್ಲಿಯೂ ಇಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.