ಬೆಂಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ 75 ವರ್ಷದ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಅಮೃತ ಮಹೋತ್ಸವ ಆಚರಿಸಲು ಅವರ ಅಭಿಮಾನಿಗಳು ಸಿದ್ಧತೆ ನಡೆಸಿದ್ದಾರೆ. ಸಿದ್ದರಾಮೋತ್ಸವದಂತೆ ಇದೀಗ ಶಿವಕುಮಾರೋತ್ಸವವನ್ನು ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಂಬಲಿಗರು ಪಟ್ಟು ಹಿಡಿದಿದ್ದಾರೆ.
ಶಿವಕುಮಾರೋತ್ಸವ ನಡೆಸುವಂತೆ ಒತ್ತಾಯಿಸಿ ಡಿ.ಕೆ.ಶಿವಕುಮಾರ್ ಬೆಂಬಲಿಗರ ಪರವಾಗಿ ಕೆಪಿಸಿಸಿ ಮಾಧ್ಯಮ ವಿಭಾಗದ ಸಂಯೋಜಕ ಜಿ.ಸಿ.ರಾಜು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಸಿದ್ದರಾಮಯ್ಯನವರ 75ನೇ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಇದಕ್ಕಾಗಿ ವಿಶೇಷ ಸಮಿತಿ ರಚನೆಯಾಗಿದೆ. ಇದೇ ಸಮಿತಿಯಿಂದ ಡಿ.ಕೆ.ಶಿವಕುಮಾರ್ ಅವರಿಗೂ ಕಾರ್ಯಕ್ರಮ ಆಯೋಜನೆ ಮಾಡಬಹುದು. ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸುವಂತೆ ಮನವಿ ಮಾಡಿದ್ದಾರೆ.