ನವದೆಹಲಿ: ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಖರ್ ಅವರು ಉಪರಾಷ್ಟ್ರಪತಿ ಹುದ್ದೆಗೆ ಎನ್.ಡಿ.ಎ. ಅಭ್ಯರ್ಥಿಯಾಗಲಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಶನಿವಾರ ಹೇಳಿದ್ದಾರೆ.
ಉಪರಾಷ್ಟ್ರಪತಿ ಚುನಾವಣೆಗೆ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಇಂದು ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಿತು.
ಪ್ರಧಾನಿ ನರೇಂದ್ರ ಮೋದಿ, ಹಿರಿಯ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ನಡ್ಡಾ ಅವರು ಸಭೆಯಲ್ಲಿ ಭಾಗವಹಿಸಿದ್ದರು.
2017 ರಲ್ಲಿ, ಬಿಜೆಪಿಯ ಮಾಜಿ ಅಧ್ಯಕ್ಷ ಮತ್ತು ಹಿರಿಯ ಸಂಸದರಾಗಿದ್ದ ಆಗಿನ ಕ್ಯಾಬಿನೆಟ್ ಸಚಿವ ಎಂ. ವೆಂಕಯ್ಯ ನಾಯ್ಡು ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಪಕ್ಷವು ಹೆಸರಿಸಿತ್ತು. ನಾಯ್ಡು ಅವರು ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆ ಅಲಂಕರಿಸಿದ್ದರು. ನಾಯ್ಡು ಅವರ ಪ್ರಸ್ತುತ ಅವಧಿ ಆಗಸ್ಟ್ 10 ರಂದು ಕೊನೆಗೊಳ್ಳುತ್ತದೆ.