ಮುಂದಿನ ವರ್ಷ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದಕ್ಕೂ ಮುನ್ನವೇ ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನದ ಆಕಾಂಕ್ಷಿಗಳ ಲಾಬಿ ಶುರುವಾಗಿದೆ. 75ನೇ ವರ್ಷದ ಹುಟ್ಟು ಹಬ್ಬದ ಆಚರಣೆ ಹೆಸರಿನಲ್ಲಿ ಸಿದ್ದರಾಮಯ್ಯನವರನ್ನು ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಲು ಅವರ ಅಭಿಮಾನಿಗಳು, ಮುಂದಾಗಿದ್ದು, ಇದರ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಾವೂ ಸಹ ಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿಕೊಂಡಿದ್ದಾರೆ.
ಇತ್ತೀಚೆಗೆ ನಡೆದ ಒಕ್ಕಲಿಗರ ಸಭೆಯಲ್ಲಿ ಮಾತನಾಡಿರುವ ಡಿ.ಕೆ. ಶಿವಕುಮಾರ್, ಎಸ್.ಎಂ. ಕೃಷ್ಣ ಬಳಿಕ ಸಮುದಾಯದವರೊಬ್ಬರು ಮುಖ್ಯಮಂತ್ರಿಯಾಗುವ ಅವಕಾಶ ಒದಗಿ ಬಂದಿದ್ದು ಹಾಗಾಗಿ ಎಲ್ಲರೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಮನವಿ ಮಾಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ತಾವು ಸಹ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಎಂಬ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ಡಿಕೆ ಶಿವಕುಮಾರ್ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಅವರು ತಮ್ಮ ಸಮುದಾಯದ ಮುಂದೆ ಹೇಳಿರುವುದಲ್ಲಿ ಯಾವುದೇ ತಪ್ಪಿಲ್ಲ. ಕಾಂಗ್ರೆಸ್ ಚುನಾವಣೆಯಲ್ಲಿ ಗೆದ್ದರೆ ಶಾಸಕರು ನಾಯಕನನ್ನು ಆಯ್ಕೆ ಮಾಡುತ್ತಾರೆ. ಬಳಿಕ ಹೈಕಮಾಂಡ್, ಮುಖ್ಯಮಂತ್ರಿ ಯಾರಾಗಬೇಕೆಂಬುದನ್ನು ತೀರ್ಮಾನಿಸುತ್ತದೆ ಎಂದು ತಿಳಿಸಿದ್ದಾರೆ.