ಕಳೆದ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಮೇಲಿನಪೇಟೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ ಘಟನೆ ಬಳಿಕ ಆ ಭಾಗದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಪ್ರವೀಣ್ ಹತ್ಯೆಯನ್ನು ಖಂಡಿಸಿ ಹಿಂದೂ ಕಾರ್ಯಕರ್ತರು ಆಕ್ರೋಶಗೊಂಡಿದ್ದು, ಭಾರಿ ಸಂಖ್ಯೆಯಲ್ಲಿ ನೆರೆದಿದ್ದ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಅಲ್ಲದೇ ಪರಿಸ್ಥಿತಿಯನ್ನು ನಿಯಂತ್ರಿಸಲು ಬೆಳ್ಳಾರೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಇದರ ಮಧ್ಯೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಟಾಂಗ್ ನೀಡಿದೆ. ರಾಜ್ಯದ ಸಮಸ್ಯೆಗಳಿಗೆ ‘ಆಕ್ಷನ್’ ಬಡವರ ನೋವಿಗೆ ‘ರಿಯಾಕ್ಷನ್’ ತೋರಬೇಕಿತ್ತು ಸಿಎಂ ಬಸವರಾಜ ಬೊಮ್ಮಾಯಿ ಅವರು, ಆದರೆ ಸಮಾಜಘಾತುಕರಿಗೆ ‘ಆಕ್ಷನ್ಗೆ ರಿಯಕ್ಷನ್’ ಎಂದು ಕುಮ್ಮಕ್ಕು ನೀಡಿದ ಪರಿಣಾಮ ಇಂದು ರಾಜ್ಯದಲ್ಲಿ ದ್ವೇಷ ತಾಂಡವವಾಡುತ್ತಿದೆ. ಹಾಲಿ ಸಿಎಂ ಧೋರಣೆಯನ್ನು ಮಾಜಿ ಸಿಎಂ ಖಂಡಿಸಿ ಶಿಷ್ಯನ ವಿರುದ್ಧ ಕಿಡಿಕಾರಿದ್ದರು ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಹೇಳಿಕೆಯನ್ನು ಈ ಸಂದರ್ಭದಲ್ಲಿ ಉಲ್ಲೇಖಿಸಿದೆ.