ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಆಗಸ್ಟ್ 1 ರಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮಲೆನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 1 ಮತ್ತು 2 ರಂದು ಭಾರಿ ಮಳೆಯಾಗುವ ಕಾರಣ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಜುಲೈ 30 ರಂದು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಆಗಲಿದ್ದು, ಮುಂದಿನ 24 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವೆಡೆ ಇಂದು ಸಾಧಾರಣ ಮಳೆ ಆಗಲಿದೆ ಎಂದು ಹೇಳಲಾಗಿದೆ.