ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಇದೇ ಮೊದಲ ಬಾರಿಗೆ ಹೊಸ ಪ್ರಯೋಗವೊಂದಕ್ಕೆ ಕೈ ಹಾಕಿದೆ. ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ವಾಟ್ಸಾಪ್ ಮೂಲಕ ಕಳುಹಿಸಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಸಿದ್ಧತೆಗಳು ನಡೆಯುತ್ತಿವೆ.
ಈ ವಿಶ್ವವಿದ್ಯಾಲಯದ ಬಹುತೇಕ ವಿದ್ಯಾರ್ಥಿಗಳು ವಿವಿಧ ಜಿಲ್ಲೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನೆಲೆಸಿದ್ದು, ಉದ್ಯೋಗಗಳನ್ನು ಸಹ ಮಾಡುತ್ತಿರುತ್ತಾರೆ. ಹೀಗಾಗಿ ವಿಶ್ವವಿದ್ಯಾಲಯದಿಂದ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟಗೊಂಡ ವೇಳೆ ಹಾಗೂ ಮೇಲ್ ಐಡಿ ಮೂಲಕ ರಿಸಲ್ಟ್ ಶೀಟ್ ಬಂದಾಗ ಇದನ್ನು ಸಕಾಲಕ್ಕೆ ಗಮನಿಸಲು ಸಾಧ್ಯವಾಗುತ್ತಿರಲಿಲ್ಲ.
ಈ ಹಿನ್ನೆಲೆಯಲ್ಲಿ ವಾಟ್ಸಾಪ್ ಮೂಲಕ ಫಲಿತಾಂಶ ಪ್ರಕಟಗೊಂಡರೆ ನೆರವಾಗುತ್ತದೆ ಎಂಬ ಕಾರಣಕ್ಕೆ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಈ ತೀರ್ಮಾನ ಕೈಗೊಂಡಿದೆ. ಸದ್ಯ ಜುಲೈ ತಿಂಗಳಿನಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ನಲ್ಲಿ ಪರೀಕ್ಷೆ ನಡೆಯಲಿದ್ದು, ಇದರ ಫಲಿತಾಂಶ ವಾಟ್ಸಾಪ್ ಮೂಲಕ ತಲುಪಲಿದೆ.
ಪ್ರಸ್ತುತ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ಸುಮಾರು 10,000 ವಿದ್ಯಾರ್ಥಿಗಳು ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ವಾಟ್ಸಾಪ್ ಮೂಲಕ ಫಲಿತಾಂಶ ಪ್ರಕಟಗೊಂಡರೆ ಅವರುಗಳಿಗೆ ಅನುಕೂಲವಾಗಲಿದೆ.