ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ್ದು, ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ತಂಗಿದ್ದಾರೆ. ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.
ನಿನ್ನೆಯೇ ಯಡಿಯೂರಪ್ಪ ಅವರನ್ನು ಭೇಟಿಯಾಗುವ ಕುರಿತು ಅಮಿತ್ ಶಾ ಸಂದೇಶ ಕಳುಹಿಸಿದ್ದರು ಎನ್ನಲಾಗಿದ್ದು, ಅದರಂತೆ ಇಂದು ಹೋಟೆಲ್ ಗೆ ತೆರಳಿದ್ದ ಯಡಿಯೂರಪ್ಪ, ಅವರೊಂದಿಗೆ ಉಪಹಾರ ಸೇವಿಸುವುದರ ಜೊತೆಗೆ 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.
ಇತ್ತೀಚೆಗಷ್ಟೇ ಯಡಿಯೂರಪ್ಪ ತಮ್ಮ ತವರು ಕ್ಷೇತ್ರ ಶಿಕಾರಿಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವ ವೇಳೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ತಮ್ಮ ಕಿರಿಯ ಪುತ್ರ ವಿಜಯೇಂದ್ರ ಕಣಕ್ಕಿಳಿಯುವುದಾಗಿ ತಿಳಿಸಿದ್ದರು.
ಅವರ ಈ ದಿಢೀರ್ ಹೇಳಿಕೆ ಹಲವು ಊಹಾಪೋಹಗಳಿಗೆ ಕಾರಣವಾಗಿದ್ದರ ಮಧ್ಯೆ, ಇಂದು ಅಮಿತ್ ಶಾ ಹಾಗೂ ಯಡಿಯೂರಪ್ಪ ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.