ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಅಣಶಿಘಟ್ಟ ಗುಡ್ಡ ಕುಸಿದಿದ್ದು, ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ.
ಉತ್ತರ ಕನ್ನಡ ಜಿಲ್ಲೆಯ ಜೋಯ್ಡಾದ ಅಣಶಿಘಟ್ಟದಲ್ಲಿ ಗುಡ್ಡ ಕುಸಿದ ಪರಿಣಾಮ ಕಾರವಾರ-ಬೆಳಗಾವಿ ರಾಜ್ಯ ಹೆದ್ದಾರಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ರಸ್ತೆಯ ಮೇಲೆ ಬೃಹತ್ ಬಂಡೆ, ಮಣ್ಣು, ಮರಗಳು ಬಿದ್ದಿದ್ದು, ವಾಹನ ಸಂಚಾರ ಅಸಾಧ್ಯವಾಗಿದೆ.
ಕಳೆದ ಒಂದು ತಿಂಗಳ ಹಿಂದೆಯೂ ಇದೇ ಮಾರ್ಗದಲ್ಲಿ ಗುಡ್ಡ ಕುಸಿತವುಂಟಾಗಿತ್ತು. ಈ ಹಿನ್ನೆಲೆಯಲ್ಲಿ ಲಘುವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಇದೀಗ ಮತ್ತೆ ಗುಡ್ಡ ಕುಸಿತವಾಗಿದ್ದರಿಂದ ಸಂಪೂರ್ಣವಾಗಿ ವಾಹನ ಸಂಚಾರ ಬಂದ್ ಮಾಡಲಾಗಿದೆ.