‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ರಾಷ್ಟ್ರಧ್ವಜವನ್ನು ಮಾರಾಟ ಮಾಡುತ್ತಿರುವುದಕ್ಕೆ ವ್ಯಂಗ್ಯವಾಡಿರುವ ಮಾಜಿ ಶಾಸಕ ಮಧು ಬಂಗಾರಪ್ಪ, ಕಾಶ್ಮೀರಿ ಫೈಲ್ಸ್ ಚಿತ್ರವನ್ನು ಉಚಿತವಾಗಿ ತೋರಿಸಿ ಈಗ ಧ್ವಜಕ್ಕೆ ದುಡ್ಡು ಪಡೆಯುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಬುಧವಾರದಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನ ಬದಲಿಸುತ್ತೇವೆ, ಧ್ವಜ ಬದಲಾಯಿಸುತ್ತೇವೆ ಎಂದು ಹೇಳಿದ್ದ ಬಿಜೆಪಿಯವರು ಈಗ ‘ಹರ್ ಘರ್ ತಿರಂಗಾ’ ಕಾರ್ಯಕ್ರಮವನ್ನು ಮಾಡಲು ಹೊರಟಿದ್ದಾರೆ ಎಂದು ಹೇಳಿದರು.
ಮಧ್ಯಪ್ರದೇಶ, ಮಹಾರಾಷ್ಟ್ರ ಹಾಗೂ ಗೋವಾದಲ್ಲಿ ವಾಮ ಮಾರ್ಗದ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿಯವರು ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಭವಿಷ್ಯ ನುಡಿದ ಅವರು, ಸಂವಿಧಾನ ಬದಲಿಸುವ ಶಕ್ತಿ ನಿಮಗಿದ್ದರೆ ಸರ್ಕಾರವನ್ನೇ ಬದಲಿಸುವ ಶಕ್ತಿಯನ್ನು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರು ಸಂವಿಧಾನದ ಮೂಲಕ ಪ್ರಜೆಗಳಿಗೆ ನೀಡಿದ್ದಾರೆ ಎಂಬುದು ನೆನಪಿರಲಿ ಎಂದು ಎಚ್ಚರಿಸಿದರು.