ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಆಸ್ಪತ್ರೆಗೆ ದಾಖಲಾಗುತ್ತಿರುವವರೂ ಸಂಖ್ಯೆಯಲ್ಲೂ ಏರಿಕೆಯಾಗಿದೆ. ಈ ಹಿನ್ನಲೆಯಲ್ಲಿ ಮತ್ತೆ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಮತ್ತೆ ಮಾಸ್ಕ್ ಧಾರಣೆ ಕಡ್ಡಾಯಗೊಳಿಸುವ ಸಾಧ್ಯತೆ ಇದ್ದು, ಇದನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸುವ ನಿಯಮವನ್ನು ಜಾರಿಗೊಳಿಸಲಾಗುತ್ತದೆ. ಜೊತೆಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಕುರಿತೂ ಇನ್ನಷ್ಟು ಅರಿವು ಮೂಡಿಸಲಾಗುತ್ತದೆ.
ಕೊರೊನಾ ಹೆಚ್ಚಳದ ಕುರಿತು ಕೇಂದ್ರ ಸರ್ಕಾರ, ರಾಜ್ಯಕ್ಕೆ ಪತ್ರ ಬರೆದು ಕಳವಳ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳ ಸಭೆ ನಡೆದಿದ್ದು, ಇದರಲ್ಲಿ ಕಠಿಣ ನಿಯಮ ಜಾರಿಗೊಳಿಸುವ ಅಭಿಪ್ರಾಯಕ್ಕೆ ಬರಲಾಗಿದೆ ಎಂದು ತಿಳಿದುಬಂದಿದೆ. ಈ ಶಿಫಾರಸ್ಸನ್ನು ಸರ್ಕಾರಕ್ಕೆ ನೀಡಲಾಗುತ್ತಿದ್ದು, ಬಳಿಕ ಅಂತಿಮ ಆದೇಶ ಹೊರಬೀಳುವ ಸಾಧ್ಯತೆ ಇದೆ.