ಶಿವಮೊಗ್ಗ: ಶಾಸಕ ಪ್ರಿಯಾಂಕ್ ಖರ್ಗೆ ಲಂಚ-ಮಂಚ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿ ಕಾರಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪ್ರಿಯಾಂಕ್ ಖರ್ಗೆ ಕ್ಷಮೆಯಿಲ್ಲದ ಅಕ್ಷಮ್ಯ ಅಪರಾಧ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಪ್ರಿಯಾಂಕ್ ಖರ್ಗೆ ಹೇಳಿಕೆ ಮೂರ್ಖತನದ ಪರಮಾವಧಿ. ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ಹೆಣ್ಣುಮಕ್ಕಳಿಗೆ ಅವಮಾನ ಮಾಡಿದ್ದಾರೆ. ಇದು ಕ್ಷಮಿಸಲಾಗದ ಅಕ್ಷಮ್ಯ ಎಂದು ವಾಗ್ದಾಳಿ ನಡೆಸಿದರು.
ಖರ್ಗೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಈ ರೀತಿಯ ಉದ್ಧಟತನ ನಡವಳಿಕೆಯನ್ನು ಜನರು ಖಂಡಿಸಬೇಕು. ಕೂಡಲೇ ಪ್ರಿಯಾಂಕ್ ಖರ್ಗೆ ಅವರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.