ಬೆಂಗಳೂರು: ಚಾಮರಾಜಪೇಟೆಯ ವಿವಾದಿತ ಮೈದಾನದಲ್ಲಿ ಇಂದು ಇದೇ ಮೊದಲ ಬಾರಿಗೆ ಸ್ವಾತಂತ್ರ್ಯ ದಿನದ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಗಿದೆ.
ಸಂಸದ ಪಿ.ಸಿ. ಮೋಹನ್, ಶಾಸಕ ಜಮೀರ್ ಅಹ್ಮದ್ ಹಾಗೂ ಗಣ್ಯರು, ಹಿರಿಯ ಅಧಿಕಾರಿಗಳು ಸೇರಿದಂತೆ ಸಾವಿರಾರು ಜನ ಭಾಗಿಯಾಗಿದ್ದರು. ಖಾಕಿ ಭದ್ರತೆಯಲ್ಲಿ ಉಪವಿಭಾಗಾಧಿಕಾರಿ ಶಿವಣ್ಣ ಧ್ವಜಾರೋಹಣ ನೆರವೇರಿಸಿದ್ದಾರೆ. ಮೈದಾನದ ಒಡೆತನದ ವಿಚಾರವಾಗಿ ವಿವಾದ ಉಂಟಾಗಿತ್ತು. ಇದು ಕಂದಾಯ ಇಲಾಖೆಗೆ ಸೇರಿದ ಆಸ್ತಿ ಎಂದು ಬಿಬಿಎಂಪಿ ಆದೇಶ ಹೊರಡಿಸಿತ್ತು. ಇಂದು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹೊತ್ತಲ್ಲೇ ಈ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಾಗಿದ್ದು, ಸ್ಥಳೀಯ ನಿವಾಸಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಜಮೀರ್ ಅಹಮ್ಮದ್ ಅವರು, ಮೈದಾನದಲ್ಲಿ ಧ್ವಜಾರೋಹಣ ಮಾಡಬೇಕೆಂದು ಹೇಳಿದ್ದೆ. ಅದೇ ರೀತಿ ಧ್ವಜಾರೋಹಣ ನೆರವೇರಿಸಿರುವುದು ಸಂತಸ ತಂದಿದೆ ಎಂದರು.