ಶಿವಮೊಗ್ಗ: ವೀರ ಸಾವರ್ಕರ್ ಭಾವಚಿತ್ರ ತೆರವು ವಿಚಾರವಾಗಿ ಆರಂಭವಾದ ಜಗಳ ಎರಡು ಗುಂಪುಗಳ ನಡುವಿನ ಸಂಘರ್ಷಕ್ಕೆ ಕಾರಣವಾಗಿದ್ದು ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಶಿವಮೊಗ್ಗ ಜಿಲ್ಲೆಯ ಅಮಿರ್ ಅಹ್ಮದ್ ವೃತ್ತದಲ್ಲಿ ಅಳವಡಿಸಲಾಗಿದ್ದ ವೀರ ಸಾವರ್ಕರ್ ಭಾವಚಿತ್ರವನ್ನು ಕೆಲವರು ತೆರವುಗೊಳಿಸಲು ಮುಂದಾಗಿದ್ದರು. ಈ ವೇಳೆ ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಕೆಲ ಮುಸ್ಲಿಂ ಯುವಕರು ಟಿಪ್ಪು ಬಾವುಟ ಹಿಡಿದು ಘೋಷಣೆ ಕೂಗಲಾರಂಭಿಸಿದ್ದಾರೆ. ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಗೆ ಹಿಂದೂ ಸಂಘಟನೆ ಕಾರ್ಯಕರ್ತರು ಸಾಥ್ ನೀಡಿದ್ದಾರೆ.
ಈ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ಆರಂಭವಾಗಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪೊಲೀಸರು ಬ್ಯಾರಿಕೇಡ್ ಗಳನ್ನು ಅಳವಡಿಸಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಮುಂದಾಗಿದ್ದಾರೆ. ಎರಡು ಗುಂಪುಗಳ ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಅಮೀರ್ ಅಹ್ಮದ್ ವೃತ್ತದ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಲಾಗಿದೆ.