ಬೆಂಗಳೂರು: ಸರ್ಕಾರ ನಡಿತಾ ಇಲ್ಲ ಮ್ಯಾನೇಜ್ ಮಾಡ್ತಿದ್ದೀವಿ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿಕೆ ನೀಡಿರುವುದಕ್ಕೆ ಸ್ವಪಕ್ಷೀಯ ಸಚಿವರಿಂದಲೇ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಸಚಿವರಾಗಿ ಮಾಧುಸ್ವಾಮಿ ಜವಾಬ್ದಾರಿಯುತ ಹೇಳಿಕೆ ನೀಡಬೇಕು. ಇಲ್ಲವೇ ರಾಜೀನಾಮೆ ನೀಡಬೇಕು ಎಂದು ತೋಟಗಾರಿಕೆ ಸಚಿವ ಮುನಿರತ್ನ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಮುನಿರತ್ನ, ಸರ್ಕಾರದ ಭಾಗವಾಗಿ ಸರ್ಕಾರಕ್ಕೆ ಮುಜುಗರ ಉಂಟು ಮಾಡುವ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಚುನಾವಣೆಗೆ ಸರ್ಕಾರ ಹೆದರುವ ಪ್ರಶ್ನೆಯೇ ಇಲ್ಲ. ನಾಳೆಯೇ ಚುನಾವಣೆ ಅಧಿಸೂಚನೆ ಹೊರಡಿಸಿದರೂ ಬಿಜೆಪಿ ಸಜ್ಜಾಗಿದೆ ಎಂದು ಹೇಳಿದ್ದಾರೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಮಾಧುಸ್ವಾಮಿ ಯಾವ ಅರ್ಥದಲ್ಲಿ ಆ ರೀತಿ ಹೇಳಿದ್ದಾರೆ ಎನ್ನುವುದು ಗೊತ್ತಿಲ್ಲ. ಅರ್ಧ ಆಡಿಯೋ ಕೇಳಿಸಿಕೊಂಡು ಏನನ್ನು ಹೇಳಲು ಆಗುವುದಿಲ್ಲ ಎಂದಿದ್ದಾರೆ.
ಕೃಷಿ ಸಚಿವ ಬಿ.ಸಿ. ಪಾಟೀಲ್, ಸರ್ಕಾರ ದಕ್ಷ, ಪ್ರಾಮಾಣಿಕ, ಸುಭದ್ರವಾಗಿ ನಡೆಯುತ್ತಿದೆ. ಮುಖ್ಯಮಂತ್ರಿಗಳು ರಾಜ್ಯದ ಆಗುಹೋಗುಗಳನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಸಚಿವ ಶಿವರಾಮ್ ಹೆಬ್ಬಾರ್ ಮಾತನಾಡಿ, ಮುಖ್ಯಮಂತ್ರಿಗಳು ಜನಪರ ಆಡಳಿತ ನೀಡುತ್ತಿದ್ದು, ಯಾವುದೇ ಚುನಾವಣೆಯನ್ನು ಎದುರಿಸಲು ನಾವು ಸಿದ್ಧವಾಗಿದ್ದೇವೆ. ಸಚಿವ ಮಾಧುಸ್ವಾಮಿ ಸರ್ಕಾರದ ಆಡಳಿತ ಕುರಿತಾಗಿ ಯಾವ ಅರ್ಥದಲ್ಲಿ ಹೇಳಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ ಎಂದರು.