ಬೆಂಗಳೂರು; ಬಿಬಿಎಂಪಿ ವಾರ್ಡ್ ಮೀಸಲಾತಿ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಿಬಿಎಂಪಿ ವಾರ್ಡ್ ಮೀಸಲಾತಿ ವಿರೋಧಿಸಿ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಮಂಜುನಾಥ್ ರೆಡ್ಡಿ ಹಾಗೂ ಬಿಬಿಎಂಪಿ ಮಾಜಿ ಸದಸ್ಯರು ಸೇರಿದಂತೆ ಕಾಂಗ್ರೆಸ್ ನಾಯಕರು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದ್ದರು. ಬಳಿಕ ಫ್ರೀಡಂ ಪಾರ್ಕ್ ನಿಂದ ಸಿಎಂ ನಿವಾಸದತ್ತ ಪ್ರತಿಭಟನಾ ರ್ಯಾಲಿ ನಡೆಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಈ ವೇಳೆ ಕಾಂಗ್ರೆಸ್ ನಾಯಕರ ರ್ಯಾಲಿ ಮಹಾರಾಣಿ ಕಾಲೇಜ್ ಬಳಿ ಬರುತ್ತಿದ್ದಂತೆ ಬ್ಯಾರಿಕೇಡ್ ಗಳನ್ನು ಹಾಕಿ ರ್ಯಾಲಿ ತಡೆದ ಪೊಲೀಸರು ಬಿ.ಕೆ.ಹರಿಪ್ರಸಾದ್, ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ ಸೇರಿದಂತೆ ಹಲವು ನಾಯಕರನ್ನು ಬಲವಂತವಾಗಿ ವಶಕ್ಕೆ ಪಡೆದು ಬಸ್ ನಲ್ಲಿ ತುಂಬಿ ಠಾಣೆಗೆ ಕರೆದೊಯ್ದಿದ್ದಾರೆ.