ಸಾವರ್ಕರ್ ಫ್ಲೆಕ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕ್ಷುಬ್ಧಗೊಂಡಿದ್ದ ಶಿವಮೊಗ್ಗ ನಗರದಲ್ಲಿ ಪರಿಸ್ಥಿತಿ ಈಗ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದ್ದು, ಇದರ ಮಧ್ಯೆ ನಿಷೇಧಾಜ್ಞೆಯನ್ನು ಆಗಸ್ಟ್ 23ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ನಗರ ವ್ಯಾಪ್ತಿಯ ಎಲ್ಲಾ ಅಂಗಡಿಗಳನ್ನು ರಾತ್ರಿ 10 ಗಂಟೆಯ ಒಳಗಾಗಿ ಮುಚ್ಚಬೇಕೆಂದು ಆದೇಶದಲ್ಲಿ ತಿಳಿಸಲಾಗಿದ್ದು, ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್ ಗಳಿಗೂ ಇದು ಅನ್ವಯವಾಗಲಿದೆ.
ಶಿವಮೊಗ್ಗ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರೆದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಕಟ್ಟೆಚ್ಚರ ವಹಿಸಲಾಗಿದೆ. ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.