ಬೆಂಗಳೂರು: ಮನೆ ಕಟ್ಟಡ ನಿರ್ಮಿಸುವ ಬಡವರು, ಮಧ್ಯಮ ವರ್ಗದವರಿಗೆ ಸಿಹಿ ಸುದ್ದಿ ಇಲ್ಲಿದೆ. ಬಡವರು, ಮಧ್ಯಮವರ್ಗದವರಿಗೆ ಸಹಾಯವಾಗುವಂತೆ ಮರಳು ನೀತಿಯನ್ನು ತಿದ್ದುಪಡಿ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆಲವರ ಕೈಯಲ್ಲಿರುವ ಮರಳು ಗಣಿಗಾರಿಕೆಯನ್ನು ಮುಕ್ತಗೊಳಿಸುವ ಅಗತ್ಯವಿದ್ದು, ಹೀಗಿರುವ ಮರಳು ನೀತಿ ತಿದ್ದುಪಡಿ ಮಾಡಬೇಕಿದೆ ಎಂದು ಹೇಳಿದರು.
ಇದೇ ವೇಳೆ ಗಣಿಗಳ ಆಧುನಿಕರಣಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲು ಸಿಎಂ ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಹಾಲಪ್ಪ ಆಚಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಸೇರಿದಂತೆ ಹಲವರು ಇದ್ದರು.