ಮೈಸೂರು: ಮಡಿಕೇರಿ ಚಲೋ ಪ್ರತಿಭಟನೆ ಮುಂದೂಡಿರುವ ಕಾಂಗ್ರೆಸ್ ನಿರ್ಧಾರವನ್ನು ಸ್ವಾಗತಿಸಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ಜಾಗೃತಿ ಸಮಾವೇಶವನ್ನು ರದ್ದು ಮಾಡುವುದಾಗಿ ಘೋಷಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಆ.26ರಂದು ಹಮ್ಮಿಕೊಂಡಿದ್ದ ಕಾಂಗ್ರೆಸ್ ಮಡಿಕೇರಿ ಚಲೋ ಮುಂದೂಡುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದು ಸಂತೋಷ. ಶಾಂತಿ-ಸುವ್ಯವಸ್ಥೆ ದೃಷ್ಟಿಯಿಂದ ಒಳ್ಳೆಯ ನಿರ್ಧಾರ. ಕಾಂಗ್ರೆಸ್ ನವರ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ ಎಂದರು.
ಜಿಲ್ಲೆಯಲ್ಲಿ ಶಾಂತಿ ವಾತಾವರಣ ನೆಲೆಸಿದಾಗ ಏನು ಬೇಕಾದರೂ ಮಾಡಲಿ. ಈಗ ಸೌಹಾರ್ದಯುತವಾಗಿ ನಡೆದುಕೊಳ್ಳುತ್ತಿರುವುದು ಸ್ವಾಗತಾರ್ಹ. ಆಗಸ್ಟ್ 26ರಂದು ಬಿಜೆಪಿಯಿಂದ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಕೂಡ ನಾವು ರದ್ದುಗೊಳಿಸುತ್ತೇವೆ ಎಂದು ಘೋಷಿಸಿದರು.