ಬೆಂಗಳೂರು: ಗಣೇಶ ಚತುರ್ಥಿ ಹಿನ್ನೆಯಲ್ಲಿ ಹಬ್ಬಕ್ಕಾಗಿ ಊರುಗಳಿಗೆ ತೆರಳಲು ಸಿದ್ಧತೆ ನಡೆಸಿರುವ ಪ್ರಯಾಣಿಕರಿಗೆ ಖಾಸಗಿ ಬಸ್ ಗಳು ಪ್ರಯಾಣ ದರ ಹೆಚ್ಚಿಸಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಬಸ್ ಮಾಲೀಕರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರಗಳಿಂದ ತಮ್ಮ ಗ್ರಾಮಗಳಿಗೆ ತೆರಳುವ ಪ್ರಯಾಣಿಕರಿಗೆ ಕೆಲವು ಧನದಾಹಿ ಖಾಸಗಿ ಬಸ್ ಗಳು ನಿಗಧಿತ ದರಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಹಣ ವಸೂಲಿ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಖಾಸಗಿ ಬಸ್ ಗಳು ರೂಟ್ ಗೆ ನಿಗಧಿ ಪಡಿಸಿದ ದರವನ್ನಷ್ಟೇ ಪ್ರಯಾಣಿಕರಿಂದ ಪಡೆಯಬೇಕು. ಒಂದು ವೇಳೆ ಯಾರಾದರೂ ಹೆಚ್ಚಿನ ಪ್ರಮಾಣದಲ್ಲಿ ದರವನ್ನು ಪಡೆದರೆ, ಅಂತಹ ಬಸ್ ಮಾಲೀಕರ ಮೇಲೆ ಯಾವುದೇ ಮುಲಾಜಿಲ್ಲದೆ, ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಖಾಸಗಿ ಬಸ್ ಮಾಲೀಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಪ್ರಯಾಣಿಕರಿಗೆ ಹೊರೆಯಾಗದಂತೆ ನಿಗದಿಪಡಿಸಿದ ದರವನ್ನು ಮಾತ್ರ ತೆಗೆದುಕೊಳ್ಳಬೇಕು. ಅನಗತ್ಯವಾಗಿ ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ. ಅಕ್ರಮವಾಗಿ ಹಣ ಸಂಪಾದನೆಯೇ ನಮ್ಮ ಗುರಿ ಎಂದರೆ ಕ್ರಮಕ್ಕೆ ಸಿದ್ದರಾಗಿ ಎಂದು ಖಾಸಗಿ ಬಸ್ ಮಾಲೀಕರಿಗೆ ತಿಳಿಸಿದ್ದಾರೆ.