ಬೆಂಗಳೂರು: ತುಮಕೂರು ಲೋಕಸಭೆ ಕ್ಷೇತ್ರದ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಅವರು ಶೀಘ್ರವೇ ಬಿಜೆಪಿ ಸೇರುವ ಸಾಧ್ಯತೆ ಇದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮುದ್ದಹನುಮೇಗೌಡ ಪಕ್ಷದಲ್ಲಿ ತಮಗೆ ಆಗಿರುವ ಅನ್ಯಾಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಪಕ್ಷ ಬಿಡುವುದಾಗಿ ತಿಳಿಸಿದ್ದಾರೆ. ನಾಯಕರು ಮನವೊಲಿಸಲು ಪ್ರಯತ್ನಿಸಿದರೂ ಇದಕ್ಕೆ ಒಪ್ಪದೇ ತಮ್ಮ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷರಿಗೆ ಕಳುಹಿಸಿದ್ದಾರೆ.
ಕುಣಿಗಲ್ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮುದ್ದಹನುಮೇಗೌಡ ಮುಂದಾಗಿದ್ದಾರೆ. 2019ರ ಚುನಾವಣೆಯಲ್ಲಿ ಹಾಲಿ ಲೋಕಸಭೆ ಸದಸ್ಯರಾಗಿದ್ದರೂ ಮುದ್ದಹನುಮೇಗೌಡರಿಗೆ ಟಿಕೆಟ್ ತಪ್ಪಿಸಿ ದೇವೇಗೌಡರಿಗೆ ಸ್ಪರ್ಧೆಗೆ ಅವಕಾಶ ಮಾಡಿಕೊಡಲಾಗಿತ್ತು. ಕುಣಿಗಲ್ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಯ ಟಿಕೆಟ್ ನೀಡಬೇಕೆಂದು ಮುದ್ದಹನುಮಗೌಡ ಬೇಡಿಕೆ ಇಟ್ಟಿದ್ದರೂ, ನಾಯಕರಿಂದ ಯಾವುದೇ ಭರವಸೆ ಸಿಗದ ಹಿನ್ನೆಲೆಯಲ್ಲಿ ಅವರು ಬಿಜೆಪಿ ಸೇರಲು ಮುಂದಾಗಿದ್ದಾರೆ.
ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮುದ್ದಹನುಮೇಗೌಡ ಅವರು ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಅವರು ಶೀಘ್ರವೇ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ. ಕುಣಿಗಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.