ರಾಜ್ಯದಾದ್ಯಂತ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಕಾರಣಕ್ಕೆ ರಸ್ತೆಗಳು ಕೆರೆಗಳಂತಾಗಿದ್ದು ವಾಹನ ಸಂಚಾರ ದುಸ್ತರವಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು ವರುಣನ ಆರ್ಭಟಕ್ಕೆ ಇನ್ನಿಲ್ಲದಂತೆ ತತ್ತರಿಸಿದೆ.
ಇದರ ಮಧ್ಯೆ ಹವಾಮಾನ ಇಲಾಖೆ ಮತ್ತೊಂದು ಶಾಕಿಂಗ್ ಸುದ್ದಿ ನೀಡಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಮಳೆ ಇನ್ನಷ್ಟು ಜೋರಾಗಿ ಸುರಿಯಲಿದೆ ಎಂದು ಹೇಳಿದೆ. ಹೀಗಾಗಿ ಮಳೆಯಿಂದ ಈಗಾಗಲೇ ತತ್ತರಿಸಿರುವ ರಾಜ್ಯದ ಜನತೆ ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.
ಸೆಪ್ಟೆಂಬರ್ 4 ರಿಂದ 6ರವರೆಗೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಭಾರಿ ಮಳೆ ಬೀಳಲಿದೆ ಎನ್ನಲಾಗಿದ್ದು ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ಸೆಪ್ಟೆಂಬರ್ 7ರಂದು ಮತ್ತಷ್ಟು ಬಿರುಸಾಗಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಣೆಯಾಗಿದೆ.
ಇನ್ನು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ಚಾಮರಾಜನಗರದಲ್ಲಿ ಸೆಪ್ಟೆಂಬರ್ 5 ರಿಂದ 3 ದಿನಗಳ ಕಾಲ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.