ಉಡುಪಿ: ಎಲ್ಲಾ ಜಿಲ್ಲೆಗಳಲ್ಲಿಯೂ ಸೇನಾ ಪೂರ್ವ ತರಬೇತಿ ಶಾಲೆ ಆರಂಭಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಹಿಂದುಳಿದ ವರ್ಗಗಳ ಮತ್ತು ಸಮಾಜ ಕಲ್ಯಾಣ ಇಲಾಖೆಯ ದೈಹಿಕ ಶಿಕ್ಷಕರ ನೇಮಕಾತಿಯಲ್ಲಿ ಅಗ್ನಿವೀರರಿಗೆ ಶೇಕಡ 50 ರಷ್ಟು ಹುದ್ದೆಗಳನ್ನು ಮೀಸಲಿಡವ ಚಿಂತನೆ ಇದೆ ಎಂದು ಸಚಿವರು ಹೇಳಿದ್ದಾರೆ.
ಉಡುಪಿಯಲ್ಲಿ ಕೋಟಿ ಚೆನ್ನಯ್ಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ ಉದ್ಘಾಟನೆ ಸಂದರ್ಭದಲ್ಲಿ ಮಾತನಾಡಿದ ಅವರು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸೇನಾಪೂರ್ವ ತರಬೇತಿ ಶಾಲೆಗಳನ್ನು ಆರಂಭಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ತರಬೇತಿ ಶಾಲೆಗಳನ್ನು ಆರಂಭಿಸಲಾಗುವುದು. ಈ ಸೇನಾಪೂರ್ವ ತರಬೇತಿ ಶಾಲೆಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ನಾಮಕರಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ತರಬೇತಿ ಶಾಲೆಗಳಲ್ಲಿ 100 ಮಂದಿಗೆ ಪ್ರವೇಶ ನೀಡಲಿದ್ದು, ನಾಲ್ಕು ತಿಂಗಳು ಊಟ, ವಸತಿಯೊಂದಿಗೆ ರಾಷ್ಟ್ರೀಯ ಮಾನ್ಯತೆ ಪಡೆದ ಸಂಸ್ಥೆಯಿಂದ ತರಬೇತಿ ನೀಡಲಾಗುತ್ತದೆ. ಈ ಶಾಲೆಗಳಲ್ಲಿ ತರಬೇತಿ ಪಡೆದ ಯುವಕರು ಅಗ್ನಿವೀರರ ನೇಮಕಾತಿಯಲ್ಲಿ ಆಯ್ಕೆಯಾಗಲು ಅವಕಾಶ ಹೆಚ್ಚಿರುತ್ತದೆ ಎಂದರು.