ಬೆಂಗಳೂರು: ಬಿಜೆಪಿ ಸರ್ಕಾರ ಮೂರು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಇಂದು ಬೃಹತ್ ಜನಸ್ಪಂದನ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಮೂರು ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ.
ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳುಗಿಸಲು ಬಿಜೆಪಿ ಸಜ್ಜಾಗಿದ್ದು, ಕಾಂಗ್ರೆಸ್, ಜೆಡಿಎಸ್ ಗೆ ತಿರುಗೇಟು ನೀಡಲು ಮುಂದಾಗಿದೆ. ಕೇಂದ್ರ ಸಚಿವರಾದ ಸ್ಮೃತಿ ಇರಾನಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ. 40 ಎಕರೆ ಪ್ರದೇಶದಲ್ಲಿ ಸಮಾವೇಶ ನಡೆಯಲಿದ್ದು, 5000 ಬಸ್ ಗಳನ್ನು ಸಮಾವೇಶಕ್ಕೆ ಜನರ ಕರೆ ತರಲು ವ್ಯವಸ್ಥೆ ಮಾಡಲಾಗಿದೆ. 200 ಎಕರೆ ಜಾಗದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದ್ದು, 2300ಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಅನಿವಾರ್ಯ ಕಾರಣಗಳಿಂದ ಎರಡು ಬಾರಿ ಮುಂದೂಡಿಕೆಯಾಗಿದ್ದ ಕಾರ್ಯಕ್ರಮ ಇಂದು ನಡೆಯಲಿದೆ. ಸಮಾವೇಶದಲ್ಲಿ ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನಾ ವರದಿಯ ಮಂಡನೆ ಮಾಡಲಾಗುವುದು. ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಸಮಾವೇಶ ಮುಗಿದ ನಂತರ ರಾಜ್ಯದ ಇತರೆ ಕಡೆಗಳಲ್ಲಿಯೂ ಇದೇ ರೀತಿಯ ಬೃಹತ್ ಜನಸ್ಪಂದನ ಸಮಾವೇಶ ಆಯೋಜಿಸಲಾಗುವುದು.