ಉಡುಪಿ: ಆಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದಲ್ಲಿ ನೀಲಿ ಮಿಶ್ರಿತ ಶ್ವೇತ ಶಿಲೆಯಲ್ಲಿ ವಿಗ್ರಹ ನಿರ್ಮಿಸಿ ಪ್ರತಿಷ್ಠಾಪಿಸಲು ಅಯೋಧ್ಯ ರಾಮ ಜನ್ಮಭೂಮಿ ಟ್ರಸ್ಟ್ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಭವ್ಯ ಶ್ರೀ ರಾಮ ಮಂದಿರದಲ್ಲಿ ನೀಲಿ ಮಿಶ್ರಿತ ಶ್ವೇತ ಶಿಲೆಯಲ್ಲಿ ಶ್ರೀರಾಮನ ವಿಗ್ರಹ ನಿರ್ಮಿಸಿ ಪ್ರತಿಷ್ಠಾಪಿಸಲು ಅಯೋಧ್ಯೆಯ ಪ್ರವಾಸಿ ಮಂದಿರದಲ್ಲಿ ಶ್ರೀರಾಮ ಜನ್ಮ ಭೂಮಿ ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲದಾಸ್ ಜೀ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಟ್ರಸ್ಟ್ ಕಾರ್ಯದರ್ಶಿ ಚಂಪಕ್ ರಾಯ್, ಕೋಶಾಧಿಕಾರಿ ಗೋವಿಂದ ಗಿರಿ ಸ್ವಾಮೀಜಿ, ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮೊದಲಾದವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಈ ಕುರಿತಾಗಿ ತೀರ್ಮಾನ ಕೈಗೊಳ್ಳಲಾಗಿದೆ. ಶ್ರೀರಾಮ ಮಂದಿರ ನಿರ್ಮಾಣಕ್ಕೆ ಸುಮಾರು 400 ಕೋಟಿ ರೂಪಾಯಿ ವೆಚ್ಚವಾಗಬಹುದು ಎಂದು ಆರಂಭದಲ್ಲಿ ಅಂದಾಜಿಸಲಾಗಿತ್ತು. ಆದರೆ, ಹಲವು ಕಾರಣಗಳಿಂದ ನಿರ್ಮಾಣ ವೆಚ್ಚ 1,300 ಕೋಟಿ ರೂಪಾಯಿ ತಲುಪಬಹುದೆಂದು ಹೇಳಲಾಗಿದೆ.
ರಾಮ ಮಂದಿರ ಪ್ರಧಾನ ಗರ್ಭಗುಡಿಯ ಶಿಖರಕ್ಕೆ ರಾಮ ಭಕ್ತ ಹನುಮನ ಪವಿತ್ರ ನೆಲವಾಗಿರುವ ಕರ್ನಾಟಕದಿಂದ ಸ್ವರ್ಣ ಶಿಖರವನ್ನು ಅರ್ಪಿಸಬೇಕು ಎನ್ನುವುದು ಭಕ್ತರ ಇಂಗಿತವಾಗಿದೆ ಎಂದು ಪೇಜಾವರ ಶ್ರೀಗಳು ಸಭೆಯಲ್ಲಿ ಮಂಡಿಸಿದ್ದಾರೆ.