ಬೆಂಗಳೂರು: ಹಿಂದಿ ದಿವಸ್ ಆಚರಣೆಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ವಿಧಾನಸಭೆಯಲ್ಲಿಯೂ ಈ ವಿಚಾರ ಪ್ರತಿಧ್ವನಿಸಿದೆ.
ವಿಧಾನಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಜೆಡಿಎಸ್ ಸದಸ್ಯರು ರಾಜ್ಯದಲ್ಲಿ ಹಿಂದಿ ದಿವಸ್ ಆಚರಣೆ ಸರಿಯಲ್ಲ, ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಕನ್ನಡ ಭಾಷೆ ಕಡ್ಡಾಯಕ್ಕೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಕನ್ನಡ ರಕ್ಷಣೆಗೆ ಸರ್ಕಾರ ಬದ್ಧ. ನೆಲ, ಜಲ ಭಾಷೆ ವಿಚಾರದಲ್ಲಿ ರಾಜಕೀಯ ಮೀರಿ ನಡೆದುಕೊಂಡಿದ್ದೇವೆ. ಕನ್ನಡ ಕಡ್ಡಾಯಗೊಳಿಸಲು ಇದೇ ಅಧಿವೇಶನದಲ್ಲಿ ಹೊಸ ಕಾನೂನು ಜಾರಿಗೆ ತರಲಾಗುವುದು. ಕನ್ನಡದಲ್ಲಿಯೇ ಇಂಜಿನಿಯರಿಂಗ್ ಪರೀಕ್ಷೆ ಬರೆಯಲು ಕೂಡ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.