ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನಲ್ಲಿದ್ದ ತನ್ನ ಸಹಪಾಠಿಗಳು ಸ್ನಾನ ಮಾಡುತ್ತಿದ್ದ ದೃಶ್ಯವನ್ನು ರಹಸ್ಯವಾಗಿ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದು ಅದನ್ನು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿರುವ ತನ್ನ ಸ್ನೇಹಿತನಿಗೆ ಕಳುಹಿಸಿದ್ದು, ಆತ ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದ.
ಇಂಥದೊಂದು ಘಟನೆ ಚಂಡೀಗಢ ವಿಶ್ವವಿದ್ಯಾಲಯದಲ್ಲಿ ನಡೆದಿದ್ದು, ತಾವು ಸ್ನಾನ ಮಾಡುತ್ತಿರುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ತಿಳಿಯುತ್ತಿದ್ದಂತೆ ಕೆಲವು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಹೇಳಲಾಗಿತ್ತು.
ಈ ವಿಚಾರ ವಿದ್ಯಾರ್ಥಿಗಳಿಗೆ ತಿಳಿಯುತ್ತಿದ್ದಂತೆಯೇ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಭಾರಿ ಪ್ರತಿಭಟನೆ ನಡೆಸಿದ್ದರು. ಇದೀಗ ಪೊಲೀಸರು ತನ್ನ ಸ್ನೇಹಿತನಿಗೆ ಎಂಎಂಎಸ್ ಕಳುಹಿಸಿದ ವಿದ್ಯಾರ್ಥಿನಿಯನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಇದನ್ನು ಇಂಟರ್ನೆಟ್ ನಲ್ಲಿ ಅಪ್ಲೋಡ್ ಮಾಡಿದ್ದ ಆರೋಪಿ ಬಂಧನಕ್ಕೂ ಬಲೆ ಬೀಸಿದ್ದಾರೆ.
ಇನ್ನು ಘಟನೆ ಕುರಿತಂತೆ ಪ್ರತಿಕ್ರಿಯಿಸಿರುವ ವಿಶ್ವವಿದ್ಯಾಲಯದ ಅಧಿಕಾರಿಗಳು ಯಾವುದೇ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿಲ್ಲ. ಆದರೆ ಆಘಾತಕ್ಕೊಳಗಾದ ಓರ್ವ ವಿದ್ಯಾರ್ಥಿನಿ ಅಸ್ವಸ್ಥಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದಾರೆ. ಅಲ್ಲದೆ ಘಟನೆ ಕುರಿತು ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದು, ವಿದ್ಯಾರ್ಥಿಗಳು ಶಾಂತಿ ಕಾಪಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ.