ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಗೆ ಕೊನೆಗೂ ರಾಜ್ಯ ಸರ್ಕಾರ ಮಣಿದಿದ್ದು, ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಮ್ಮತಿ ಸೂಚಿಸಿದೆ.
ಆರೋಗ್ಯ ಸಚಿವ ಡಾ.ಸುಧಾಕರ್ ನೇತೃತ್ವದಲ್ಲಿ ಇಂದು ನಡೆದ ಉತ್ತರ ಕನ್ನಡ ಜಿಲ್ಲಾ ಶಾಸಕರ ಸಭೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ. ಈ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಸಿಎಂ ಬಸವರಾಜ್ ಬೊಮ್ಮಾಯಿ, ಆರೋಗ್ಯ ಸಚಿವ ಸುಧಾಕರ್ ಜಿಲ್ಲಾ ಪ್ರವಾಸ ಕೈಗೊಂಡು ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಲಿದ್ದಾರೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಸರ್ಕಾರ ಬದ್ಧವಿದೆ. ಜಿಲ್ಲೆಯಲ್ಲಿ ಸುಸಜ್ಜಿತವಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾಗಲಿದೆ. ಈ ಕುರಿತು ಆರ್ಥಿಕ ಇಲಾಖೆಗೆ ಕಡತ ಕಳುಹಿಸಲಾಗಿದೆ. ಆದರೆ ಆಸ್ಪತ್ರೆ ನಿರ್ಮಾಣದ ಸ್ಥಳದ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಅಧಿವೇಶನದ ಬಳಿಕ ನಾನು ಹಾಗೂ ಸಿಎಂ ಬೊಮ್ಮಾಯಿ ಜಿಲ್ಲಾ ಪ್ರವಾಸ ಕೈಗೊಂಡು ಸ್ಥಳ ಪರಿಶೀಲನೆ ನಡೆಸುವುದಾಗಿ ತಿಳಿಸಿದರು.