ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಯನ್ನು ನೋಡಿಕೊಳ್ಳುತ್ತಿದ್ದ ಮಹಿಳೆಯೊಬ್ಬರು ಅಲ್ಲಿಯೇ ನಮಾಜ್ ಮಾಡಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ವಿಚಾರಣೆ ನಡೆಸಿದ್ದ ಪೊಲೀಸರು ಇದು ಅಪರಾಧವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಈ ವಿಡಿಯೋ ವೈರಲ್ ಆದ ಬಳಿಕ ಈ ಕುರಿತು ಪರ – ವಿರೋಧದ ಅಭಿಪ್ರಾಯಗಳು ಕೇಳಿ ಬಂದಿದ್ದವು. ಆಸ್ಪತ್ರೆ, ಸಾರ್ವಜನಿಕ ಸ್ಥಳವಾಗಿರುವುದರಿಂದ ಅಲ್ಲಿ ನಮಾಜ್ ಮಾಡಿದ್ದು ಸರಿಯಲ್ಲ ಎಂದು ಕೆಲವರು ಹೇಳಿದರೆ ಮತ್ತೆ ಕೆಲವರು ರೋಗಿಯ ಚೇತರಿಕೆಗಾಗಿ ಮಹಿಳೆ ಪ್ರಾರ್ಥನೆ ಸಲ್ಲಿಸಿದರೆ ಅದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದ್ದರು.
ಇದಾದ ಬಳಿಕ ಪೊಲೀಸರು ವಿಚಾರಣೆ ನಡೆಸಿದ್ದು, ಮಹಿಳೆ ಯಾವುದೇ ದುರುದ್ದೇಶದಿಂದ ಆಸ್ಪತ್ರೆಯಲ್ಲಿ ನಮಾಜ್ ಮಾಡಿಲ್ಲ. ತಾನು ನೋಡಿಕೊಳ್ಳುತ್ತಿದ್ದ ರೋಗಿ ಶೀಘ್ರದಲ್ಲಿ ಚೇತರಿಸಿಕೊಳ್ಳಬೇಕೆಂಬ ಕಾರಣಕ್ಕೆ ಪ್ರಾರ್ಥನೆ ಸಲ್ಲಿಸಿದ್ದಾರೆ ಇದು ಯಾವುದೇ ಅಪರಾಧ ಕಾಯ್ದೆಗೆ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಘಟನೆ ಕುರಿತು ಕೆಲವರು ಸುಳ್ಳು ಸುದ್ದಿ ಹಬ್ಬಿಸುತ್ತಿರುವುದರ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.