ಬೆಂಗಳೂರು: ನವರಾತ್ರಿ ದಸರಾ ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿಯಿಂದ ಪ್ರಯಾಣಿಕರ ಅನುಕೂಲಕ್ಕಾಗಿ ರಾಜ್ಯದ ವಿವಿಧಡೆಗೆ ಹೆಚ್ಚುವರಿಗಾಗಿ 2000 ಬಸ್ ಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ಸೆ. 30 ರಿಂದ ಅ. 3 ರವರೆಗೆ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ, ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದಿಂದ ವಿಶೇಷ ಬಸ್ ಗಳು ಕಾರ್ಯಾಚರಣೆ ನಡೆಸಲಿವೆ. ಬೆಂಗಳೂರಿನಿಂದ ಮೈಸೂರಿಗೆ ಹೆಚ್ಚುವರಿ 200 ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.
ಮೈಸೂರಿಂದ ಸುತ್ತಮುತ್ತಲ ಪ್ರೇಕ್ಷಣೀಯ ಸ್ಥಳಗಳ ಭೇಟಿಗೆ 250 ವಿಶೇಷ ಬಸ್ ಮತ್ತು ಪ್ರವಾಸ ಪ್ಯಾಕೇಜ್ ನೀಡಲಾಗಿದೆ. ರಾಜ್ಯದ ಜಿಲ್ಲಾ ಮತ್ತು ತಾಲೂಕು ನಿಲ್ದಾಣಗಳಲ್ಲಿಯೂ ಹೆಚ್ಚುವರಿ ಬಸ್ ಗಳ ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಲಾಗಿದೆ.
ದಾವಣಗೆರೆ, ಮಂಗಳೂರು, ಶಿವಮೊಗ್ಗ, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಸೇರಿದಂತೆ ಪ್ರಮುಖ ನಗರ, ಧಾರ್ಮಿಕ ಸ್ಥಳಗಳು, ಹಲವು ಮಾರ್ಗಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ರಾಜ್ಯದ ವಿವಿಧ ಭಾಗಗಳಿಂದ ಮತ್ತು ಹೊರ ರಾಜ್ಯದ ಪ್ರಮುಖ ನಗರಗಳಿಂದ ಅ. 7ರಿಂದ 9 ರವರೆಗೆ ಬೆಂಗಳೂರಿಗೆ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಿಗೆ ಮುಂಗಡ ಟಿಕೆಟ್ ಕಾಯ್ದಿರಿಸಿದರೆ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುತ್ತದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ ಗಳನ್ನು ಒಟ್ಟಿಗೆ ಕಾಯ್ದಿರಿಸಿದರೆ ಪ್ರಯಾಣದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.