ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಆರಂಭಿಸಿರುವ ‘ಭಾರತ್ ಜೋಡೋ’ ಯಾತ್ರೆ ಇಂದು ತಮಿಳುನಾಡಿನ ಭಾಗದಿಂದ ರಾಜ್ಯದ ಗುಂಡ್ಲುಪೇಟೆಗೆ ಪ್ರವೇಶಿಸುತ್ತಿದ್ದು, ಇದರ ಸ್ವಾಗತಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಗುಂಡ್ಲುಪೇಟೆಯಲ್ಲಿ ಬೀಡುಬಿಟ್ಟಿದ್ದಾರೆ.
ಬೆಳಗ್ಗೆ 9 ಗಂಟೆಗೆ ಗುಂಡ್ಲುಪೇಟೆಗೆ ರಾಹುಲ್ ಗಾಂಧಿ ಹಾಗೂ ಅವರ ಸಹವರ್ತಿಗಳು ಆಗಮಿಸುತ್ತಿದ್ದು, ಬಳಿಕ ಅಂಬೇಡ್ಕರ್ ಭವನದ ಎದುರಿನ ಖಾಸಗಿ ಜಾಗದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ 25ರಿಂದ 30 ಸಾವಿರ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ.
ಇದೇ ಸಂದರ್ಭದಲ್ಲಿ ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದವರೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸಲಿದ್ದಾರೆ. ಐಕ್ಯತಾ ಯಾತ್ರೆ ರಾಜ್ಯ ಪ್ರವೇಶದ ಹಿನ್ನೆಲೆಯಲ್ಲಿ ಪೊಲೀಸರು ಯಾತ್ರೆ ಸಾಗುವ ಮಾರ್ಗದುದ್ದಕ್ಕೂ ವ್ಯಾಪಕ ಬಂದೋಬಸ್ತ್ ಕೈಗೊಂಡಿದ್ದಾರೆ.