ಪಾಲಿಟೆಕ್ನಿಕ್ ಕಾಲೇಜು ಮತ್ತು ಕಚೇರಿಗಳಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯಗೊಳಿಸಿ ತಾಂತ್ರಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ತನ್ನ ವ್ಯಾಪ್ತಿಯಲ್ಲಿ ಬರುವ ಕಾಲೇಜು ಮತ್ತು ಕಚೇರಿಗಳಿಗೆ ಈ ಆದೇಶ ಅನ್ವಯವಾಗಲಿದ್ದು, ಒಂದು ವೇಳೆ ಬಯೋಮೆಟ್ರಿಕ್ ಕಾರ್ಯ ನಿರ್ವಹಿಸದಿದ್ದ ಪಕ್ಷದಲ್ಲಿ ಸಂಬಂಧಪಟ್ಟ ಪ್ರಾಂಶುಪಾಲರ ಹಂತದಲ್ಲಿಯೇ ಇದನ್ನು ಸರಿಪಡಿಸಬೇಕು ಎಂದು ತಿಳಿಸಲಾಗಿದೆ.
ಬಯೋಮೆಟ್ರಿಕ್ ಹಾಜರಾತಿ ಆಧರಿಸಿಯೇ ವೇತನ ಪಾವತಿಗೆ ಕ್ರಮ ವಹಿಸಬೇಕೆಂದು ಸೂಚಿಸಲಾಗಿದ್ದು, ಇಲ್ಲದಿದ್ದರೆ ಇದರ ಆಗುಹೋಗುಗಳಿಗೆ ಪ್ರಾಂಶುಪಾಲರೇ ಜವಾಬ್ದಾರರು ಎಂದು ಎಚ್ಚರಿಸಲಾಗಿದೆ. ಅಲ್ಲದೇ ಪ್ರತಿ ತಿಂಗಳ ಒಂದನೇ ತಾರೀಖಿನಂದು ಹಿಂದಿನ ತಿಂಗಳ ಹಾಜರಾತಿಯನ್ನು ಆಯುಕ್ತಾಲಯಕ್ಕೆ ಸಲ್ಲಿಸುವಂತೆ ಹೇಳಲಾಗಿದೆ.