ಬೆಂಗಳೂರು: ನಾಡಿನಾದ್ಯಂತ ಆಯುಧ ಪೂಜೆ, ವಿಜಯದಶಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ, ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹಬ್ಬದ ಸಂಭ್ರಮಕ್ಕೆ ಅಡ್ಡಿಯಾಗಿದೆ.
ಆಯುಧ ಪೂಜೆ ದಿನದಂದು ಬೈಕ್, ಸ್ಕೂಟರ್, ಕಾರ್, ಟ್ರ್ಯಾಕ್ಟರ್, ಲಾರಿ, ಬಸ್, ಗ್ಯಾರೇಜ್, ವರ್ಕ್ ಶಾಪ್, ಕೆಲಸಕ್ಕೆ ಬಳಸುವ ಸಲಕರಣೆಗಳು, ಆಯುಧಗಳನ್ನು ತೊಳೆದು ಸ್ವಚ್ಛಗೊಳಿಸಿ ಅಲಂಕರಿಸಿ ಪೂಜಿಸಲಾಗುತ್ತದೆ. ಆದರೆ, ಅನೇಕ ಜಿಲ್ಲೆಗಳಲ್ಲಿ ಮಳೆ ಹಬ್ಬದ ಸಂಭ್ರಮಕ್ಕೆ ಅಡ್ಡಿಯಾಗಿದ್ದು, ಭಾರೀ ಮಳೆಯ ಕಾರಣ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಕೂಡ ಮಳೆ ಮುಂದುವರೆಯಲಿದೆ. ಇನ್ನೆರಡು ದಿನಗಳ ಕಾಲ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಇಂದು ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.