
ಬೆಂಗಳೂರು: ಕರ್ನಾಟಕ ಸರ್ಕಾರದ ಗೃಹ ಸಚಿವರ ಮನವಿಯಂತೆ, ಕೇಂದ್ರ ಗೃಹ ಸಚಿವಾಲಯ ರಾಜ್ಯಕ್ಕೆ ವಿಧಿ ವಿಜ್ಞಾನ ವಿಶ್ವ ವಿದ್ಯಾಲಯದ ಸ್ಥಾಪನೆಗೆ ಹಸಿರು ನಿಶಾನೆ ನೀಡಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಈ ಸಂಬಂಧ ಇಂದು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ, ಸಭೆ ನಡೆಸಿ ಚರ್ಚಿಸಿದ್ದಾರೆ.
ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ(ಒಳಾಡಳಿತ ಇಲಾಖೆ) ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹಿತೇಂದ್ರ, ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಲತಾ, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ನಾಗರಾಜ್ ಸಭೆಯಲ್ಲಿ ಭಾಗವಹಿಸಿದ್ದರು.
ಪ್ರಸ್ತಾವಿತ ವಿಶ್ವ ವಿದ್ಯಾಲಯ ಸ್ಥಾಪನೆಗೆ ಸೂಕ್ತವಾದ ಜಮೀನು ಅಗತ್ಯವಿದ್ದು, ಅದರ ಲಭ್ಯತೆ ಹಾಗೂ ಇನ್ನಿತರ ಮೂಲಭೂತ ಸೌಕರ್ಯ ಒದಗಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.