ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಐದು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆ ನಡೆಸಲು ನಿರ್ಧರಿಸಿದೆ.
ವಾರ್ಷಿಕ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳು ಪಬ್ಲಿಕ್ ಪರೀಕ್ಷೆ ಎದುರಿಸಬೇಕಾಗಿದೆ. ಎರಡು ವರ್ಷಗಳ ಹಿಂದೆ ಪಬ್ಲಿಕ್ ಪರೀಕ್ಷೆ ಬಗ್ಗೆ ಚರ್ಚೆ ನಡೆದು ತೀವ್ರ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಪಬ್ಲಿಕ್ ಪರೀಕ್ಷೆ ಹೆಸರನ್ನು ಬದಲಾವಣೆ ಮಾಡಿ ಮೌಲ್ಯಾಂಕನ ಪರೀಕ್ಷೆ ಎಂದು ನಡೆಸಲಾಗಿತ್ತು.
ಅಕ್ಟೋಬರ್ 12ರಂದು ಶಿಕ್ಷಣ ಇಲಾಖೆಯ ಉನ್ನತ ಮಟ್ಟದ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಹಾಗೂ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಪಬ್ಲಿಕ್ ಪರೀಕ್ಷೆ ನಡೆಸುವ ಕುರಿತು ರೂಪುರೇಷೆ ಸಿದ್ದಪಡಿಸಲಾಗುವುದು ಎಂದು ಹೇಳಲಾಗಿದೆ.
ರಾಜ್ಯದಲ್ಲಿ ಒಂದರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪಾಸ್ ಮಾಡಲಾಗುತ್ತಿದ್ದು, ಕಲಿಕೆ ಆಸಕ್ತಿ ಕಡಿಮೆಯಾಗಿದೆ. ಕೊರೋನಾದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಸೇರಿದಂತೆ ವಿವಿಧ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಎದುರಿಸುವುದು ವಿದ್ಯಾರ್ಥಿಗಳಿಗೆ ಕಷ್ಟ ಸಾಧ್ಯವಾಗುವ ಹಿನ್ನೆಲೆಯಲ್ಲಿ ಎರಡು ಹಂತದಲ್ಲಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಆಧಾರಿತವಾಗಿ ರಾಜ್ಯ ಶಾಲಾ ಮಾನಕ ಪ್ರಾಧಿಕಾರದ ಮೂಲಕ ಪಬ್ಲಿಕ್ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.