ರಾಮನಗರ: ರಾಜ್ಯದಲ್ಲಿ 140 ಸ್ಥಾನಗಳನ್ನು ಗೆದ್ದು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ರಾಮನಗರ ತಾಲೂಕಿನ ಹರಿಸಂದ್ರ ಗ್ರಾಮದಲ್ಲಿ ಮಾತನಾಡಿದ ಅವರು, ಯಾರು ಎಷ್ಟೇ ಬೊಬ್ಬೆ ಹೊಡೆದರೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಎರಡು ದಿನದ ನಂತರ ಎರಡು ತಂಡಗಳಾಗಿ ರಾಜ್ಯ ಪ್ರವಾಸ ಆರಂಭಿಸುತ್ತೇವೆ. ಸುಮಾರು 50 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ನಡೆಸುತ್ತೇವೆ ಎಂದರು.
ಈಗಾಗಲೇ ಕೆಲವರು ನಾನೇ ಮುಖ್ಯಮಂತ್ರಿ, ನಾನೇ ಉಪಮುಖ್ಯಮಂತ್ರಿ ಎಂದು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರಿಗೆ ಯಡಿಯೂರಪ್ಪ ಟಾಂಗ್ ಕೊಟ್ಟಿದ್ದಾರೆ. 2023 ಕ್ಕೆ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ನೀಡಿದ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಮಗನ ಮೇಲಿನ ಮಮತೆಯಿಂದ ದೇವೇಗೌಡರು ಹೇಳಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ
ಭಾರತ್ ಜೋಡೋ ಯಾತ್ರೆಗೆ ಹೆದರಿ ಮೀಸಲಾತಿ ಹೆಚ್ಚಳ ಮಾಡಲಾಗಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಕ್ಕೆ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಆ ಮನುಷ್ಯನಿಗೆ ನಾನು ಪ್ರಶ್ನೆ ಮಾಡುತ್ತೇನೆ. ಉತ್ತರಪ್ರದೇಶದಲ್ಲಿ ನಿಮ್ಮ ತಂಗಿ ಮಹಿಳೆಯರು ಸೇರಿ ಎಲ್ಲರನ್ನೂ ಸೇರಿ ಪ್ರಚಾರ ಮಾಡಿದಿರಲ್ಲ ಏನಾಯ್ತು ಎಂದು ಪ್ರಶ್ನಿಸಿದ್ದಾರೆ. ಭಾರತ್ ಜೋಡೋ ಯಾತ್ರೆಯಿಂದ ಏನೂ ಆಗಲ್ಲ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಡ್ರೆಸ್ ಇಲ್ಲವಾಗಿದೆ. ರಾಜ್ಯದಲ್ಲಿ ಮಾತ್ರ ಉಸಿರಾಡುತ್ತಿದೆ. ಇಲ್ಲಿ ಬಂದು ಮನ ಬಂದಂತೆ ಮಾತನಾಡಿದರೆ ಪ್ರಯೋಜನವಿಲ್ಲ. ಕರ್ನಾಟಕದಲ್ಲಿ ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ.