ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶನಿವಾರ ಕಾಶ್ಮೀರಿ ಪಂಡಿತ್ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಚೌಧರಿ ಗುಂಡ್ ಪ್ರದೇಶದ ಅವರ ನಿವಾಸದ ಬಳಿ ಪೂರನ್ ಕಿಶನ್ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಶೋಪಿಯಾನ್ ಆಸ್ಪತ್ರೆಗೆ ಸ್ಥಳಾಂತರಿಸಿದ ನಂತರ ಚಿಕಿತ್ಸೆ ಫಲಕಾರಿಯಾಗದೆ ಕಿಶನ್ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಮೃತ ವ್ಯಕ್ತಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಘಟನೆ ಬಳಿಕ ಪ್ರದೇಶವನ್ನು ಸುತ್ತುವರಿಯಲಾಗಿದ್ದು, ದಾಳಿಕೋರರನ್ನು ಹಿಡಿಯಲು ಕಾರ್ಯಾಚರಣೆ ಆರಂಭಿಸಲಾಗಿದೆ. ಇದರ ಮಧ್ಯೆ ಜಮ್ಮುವಿನಲ್ಲಿ ಕಾಶ್ಮೀರ ಪಂಡಿತರು ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ನಾಗರಿಕರ ಹತ್ಯೆಗಳ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ ಸ್ಥಳಾಂತರಕ್ಕೆ ಕೆಲವರು ಒತ್ತಾಯಿಸಿದರು.