ರಾಮನಗರ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಲೂಟಿ ಹೊಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವುದೇ ನನ್ನ ಗುರಿ ಎಂದು ಹೇಳಿದ್ದಾರೆ.
ಚನ್ನಪಟ್ಟಣಕ್ಕೆ ಅದ್ಯಾವನೋ ತಹಶೀಲ್ದಾರ್ ಬಂದಿದ್ದಾನೆ. ನನ್ನ ವಿರುದ್ಧ ತೊಡೆತಟ್ಟಿ ನಿಲ್ಲಲು ಬಂದಿದ್ದಾನೆ. ಆರು ತಿಂಗಳು ಆದ್ಮೇಲೆ ತಹಶೀಲ್ದಾರ್ ಎಲ್ಲಿರುತ್ತಾನೋ ಗೊತ್ತಿದೆ. ಇಂತಹ ಸಾಕಷ್ಟು ಅಧಿಕಾರಿಗಳನ್ನು ನೋಡಿದ್ದೇನೆ ಎಂದು ಚನ್ನಪಟ್ಟಣ ತಹಶೀಲ್ದಾರ್ ವಿರುದ್ಧ ಕಿಡಿ ಕಾರಿದ್ದಾರೆ.
ಬಡವರ ಭೂಮಿ ತಮ್ಮ ಮಕ್ಕಳ ಹೆಸರಿಗೆ ಬರೆಸಿಕೊಂಡಿದ್ದಾರೆ. ನಿಮ್ಮಂತಹವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ಸಿ.ಪಿ. ಯೋಗೇಶ್ವರ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ 150 ಸ್ಥಾನ ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳುತ್ತಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಏನು ಸಾಧನೆ ಮಾಡಿದೆ? ಬಡ ಕುಟುಂಬದವರಿಗೆ ಮನೆ ಕೊಡುವ ಯೋಗ್ಯತೆ ಇಲ್ಲ ಎಂದು ಟೀಕಿಸಿದ್ದಾರೆ.