ಬೆಂಗಳೂರು: ಪವರ್ ಸ್ಟಾರ್ ದಿ.ಪುನೀತ್ ರಾಜ್ ಕುಮಾರ್ ಅವರಿಗೆ ಇಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ವಿಧಾನಸೌಧದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ವಿಧಾನಸೌಧ ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. 9 ಎಸಿಪಿಗಳು, 21 ಪೊಲೀಸ್ ಇನ್ಸ್ ಪೆಕ್ಟರ್, 30 ಪಿಎಸ್ ಐ, 300 ಕಾನ್ಸ್ ಟೇಬಲ್ ಗಳು, 6 ಕೆ ಎಸ್ ಆರ್ ಪಿ ತುಕಡಿ, ನಿಯೋಜನೆ ಮಾಡಲಾಗಿದೆ.
ಮಧ್ಯಾಹ್ನ 12 ಗಂಟೆ ಬಳಿಕ ಅಂಬೇಡ್ಕರ್ ರಸ್ತೆಯಲ್ಲಿ ಸಂಚಾರ ಬಂದ್ ಮಾಡಲಾಗುತ್ತಿದೆ. ಸಂಚಾರ ವಿಭಾಗದ ಡಿಸಿಪಿ ನೇತೃತ್ವದಲ್ಲಿ ಟ್ರಾಫಿಕ್ ನಿರ್ವಹಣೆ ಮಾಡಲಾಗುತ್ತಿದ್ದು, 500ಕ್ಕೂ ಹೆಚ್ಚು ಟ್ರಾಫಿಕ್ ಪೊಲೀಸರ ನಿಯೋಜನೆ ಮಾಡಲಾಗಿದೆ.