ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಆರಂಭವಾಗಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಮಾಜಿ ಸಚಿವ ರಮೇಶ ಜಾರಕಿಹೊಳಿ ಜೆಡಿಎಸ್ ಪಕ್ಷಕ್ಕೆ ಆಹ್ವಾನ ನೀಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಸಿ.ಎಂ.ಇಬ್ರಾಹಿಂ, ರಮೇಶ್ ಜಾರಕಿಹೊಳಿ ಜೆಡಿಎಸ್ ಗೆ ಬಂದರೆ ಸ್ವಾಗತ ಜೆಡಿಎಸ್ ಪಕ್ಷ ಜನರಿಗಾಗಿ ಇರುವ ಪಕ್ಷ. ನಮ್ಮ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ರಮೇಶ್ ಜಾರಕಿಹೊಳಿ ಅಥವಾ ಯಾರೇ ಬಂದರೂ ಸ್ವಾಗತ ಎಂದರು.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟಿಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ನಾನು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇವೆ. ಇದರ ಜೊತೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಬರುತ್ತಿದ್ದಾರೆ. ಜನರು ಸಾವಿರಾರು ಸಂಖ್ಯೆಯಲ್ಲಿ ಸ್ಪಂದಿಸುತ್ತಿದ್ದಾರೆ ಎಂದರು.
ಎಲ್ಲ ಸಮಾಜದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜೆಡಿಎಸ್ ಕೆಲಸ ಮಾಡುತ್ತಿದೆ. ಇದು ಸರ್ವಜನಾಂಗದ ಶಾಂತಿಯ ತೋಟ ಎಲ್ಲರಿಗೂ ಸಮಾನವಾಗಿ ಬದುಕುವ ಹಕ್ಕಿದೆ. ವಿಧಾನಸಭಾ ಚುನಾವಣೆಯಲ್ಲಿ ಈ ಭಾರಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.