ಬೆಳಗಾವಿ: ಗೋಕಾಕ್ ನಲ್ಲಿ ಪಂಚಮಸಾಲಿ 2ಎ ಮೀಸಲಾತಿ ಹೋರಾಟಕ್ಕೆ ಸಂಬಂಧಿಸಿದಂತೆ ಬೃಹತ್ ಸಮಾವೇಶ ನಡೆಯಲಿದ್ದು, ಸಮಾವೇಶದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆಗಳ ಬಗ್ಗೆ ಯಾವುದೇ ಮಾತನಾಡಬಾರದು ಎಂದು ಸತೀಶ್ ಜಾರಕಿಹೊಳಿ ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ.
ಸಮಾವೇಶದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಲಿದ್ದಾರೆ. ಸಮಾವೇಶಕ್ಕೆ ಆಗಮಿಸುತ್ತಿರುವ ಶಾಸಕ ಯತ್ನಾಳ್ ಗೆ ಸತೀಶ್ ಜಾರಕಿಹೊಳಿ ಬೆಂಬಲಿಗರು ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ್ದು, ಹಿಂದು ಪದದ ಬಗ್ಗೆ ಸತೀಶ್ ಜಾರಕಿಹೊಳಿ ನೀಡಿದ್ದ ವಿವಾದಾತ್ಮಕ ಹೇಳಿಕೆ ಬಗ್ಗೆ ಯಾವುದೇ ಮಾತನಾಡಬಾರದು. ಪಂಚಮಸಾಲಿ ಹೋರಾಟ ವಿಚಾರ ಬಿಟ್ಟು ಬೇರೆ ವಿಚಾರ ಮಾತನಾಡಿದರೆ ವೇದಿಕೆಗೆ ನುಗ್ಗಿ ಹೊಡೆಯುತ್ತೇವೆ ಎಂದು ವಾರ್ನಿಂಗ್ ಕೊಟ್ಟಿದ್ದಾರೆ.
ಯಾತ್ನಾಳ್ ಅವರು ಯಡಿಯೂರಪ್ಪ, ವಿಜಯೇಂದ್ರ ಬಗ್ಗೆ ಮಾತನಾಡಿದಂತೆ ಇಲ್ಲಿ ಗೋಕಾಕ್ ಗೆ ಬಂದು ಸತೀಶ್ ಜಾರಕಿಹೊಳಿ ಬಗ್ಗೆ ಮಾತನಾಡಿದ್ರೆ ಹುಷಾರ್. ಆಮೇಲೆ ಪರಿಸ್ಥಿತಿ ಕಠಿಣವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.