ತುಮಕೂರು ಸಂಸದ ಜಿ.ಎಸ್. ಬಸವರಾಜು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ, ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಬಸವರಾಜು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರಾ ಎಂಬ ಪ್ರಶ್ನೆ ಮೂಡಿದೆ.
ಮೂಲತಃ ಕಾಂಗ್ರೆಸ್ ನಲ್ಲಿದ್ದ ಬಸವರಾಜು ಯಡಿಯೂರಪ್ಪನವರನ್ನು ಬೆಂಬಲಿಸಿ ಬಿಜೆಪಿ ಸೇರ್ಪಡೆಯಾಗಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕಾಂಗ್ರೆಸ್ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ತುಮಕೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದು, ಬಿಜೆಪಿಯ ಜಿ.ಎಸ್. ಬಸವರಾಜು ವಿರುದ್ಧ ಪರಾಭವಗೊಂಡಿದ್ದರು. ಈ ಚುನಾವಣೆಯಲ್ಲಿ ಕೆ.ಎನ್. ರಾಜಣ್ಣ, ಬಸವರಾಜು ಅವರನ್ನು ಬೆಂಬಲಿಸಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು.
ಇದೀಗ ಈ ಇಬ್ಬರು ನಾಯಕರು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮಗೆ ಬಿಜೆಪಿ ಟಿಕೆಟ್ ಸಿಗುವುದು ಕಷ್ಟವೆಂಬುದನ್ನು ಅರಿತಿರುವ ಬಸವರಾಜು, ತಮ್ಮ ಪುತ್ರ ತುಮಕೂರು ನಗರ ಬಿಜೆಪಿ ಶಾಸಕ ಜ್ಯೋತಿ ಗಣೇಶ್ ಅವರ ರಾಜಕೀಯ ಹಿತಾಸಕ್ತಿಯನ್ನು ಪರಿಗಣಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
ವಿಧಾನಸಭಾ ಚುನಾವಣೆಯಲ್ಲಿ ಪುತ್ರನಿಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ ತಾವು ಬಿಜೆಪಿ ತೊರೆಯಲು ಸಿದ್ದ ಎಂಬ ಸಂದೇಶವನ್ನು ಬಸವರಾಜು ರವಾನಿಸಿದ್ದಾರೆ ಎನ್ನಲಾಗಿದ್ದು, ಇದಕ್ಕೆ ಕಾಂಗ್ರೆಸ್ ನಾಯಕರಿಂದಲೂ ಪೂರಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಬಸವರಾಜು ಹಾಗೂ ಕೆ.ಎನ್. ರಾಜಣ್ಣ ನಡೆಸಿರುವ ಮಾತುಕತೆ ಮಹತ್ವ ಪಡೆದುಕೊಂಡಿದೆ.