ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದ ಆಯ್ಕೆಯಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಮತ್ತೊಮ್ಮೆ ಕ್ಷೇತ್ರ ಬದಲಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕೋಲಾರ, ವರುಣಾ ಹಾಗೂ ಬಾದಾಮಿ ಕ್ಷೇತ್ರಗಳ ಪೈಕಿ ಯಾವುದಾದರೂ ಒಂದನ್ನು ಆಯ್ಕೆ ಮಾಡಿಕೊಳ್ಳುವ ಚಿಂತನೆಯಲ್ಲಿ ಅವರಿದ್ದಾರೆ ಎಂದು ಹೇಳಲಾಗಿದೆ.
ಹೀಗಾಗಿ ಇತ್ತೀಚೆಗಷ್ಟೇ ಕೋಲಾರ ಪ್ರವಾಸ ಕೈಗೊಂಡಿದ್ದ ಅವರು ಅಲ್ಲಿನ ನಾಯಕರ ಜೊತೆ ಚರ್ಚೆ ನಡೆಸಿದ್ದರು. ಇದರ ಮಧ್ಯೆ ಕೋಲಾರದಿಂದ ಅವರು ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದಂತೆ ಅವರನ್ನು ಪರಾಭವಗೊಳಿಸಲು ಈಗಲೇ ಸಿದ್ಧತೆ ನಡೆಯುತ್ತಿದೆ ಎಂದು ಹೇಳಲಾಗಿತ್ತು. ಸ್ವತಃ ಸಿದ್ಧರಾಮಯ್ಯನವರೇ ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವೇಳೆ ಇದನ್ನು ಹೇಳಿಕೊಂಡಿದ್ದರು.
ಇದೀಗ ವರುಣಾ ಕ್ಷೇತ್ರದಿಂದಲೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಅನ್ಯರಿಂದ ಸಿದ್ದರಾಮಯ್ಯನವರ ಮೇಲೆ ಒತ್ತಡ ಹೆಚ್ಚುತ್ತಿದೆ ಎನ್ನಲಾಗಿದೆ. ಕಳೆದ ಮೂರು ಚುನಾವಣೆಗಳಲ್ಲೂ ವರುಣಾದಲ್ಲಿ ಕಾಂಗ್ರೆಸ್ ಜಯಗಳಿಸಿದ್ದು, ಪ್ರಸ್ತುತ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ ಸೇಫ್ ಆಗಿರುವ ಈ ಕ್ಷೇತ್ರವನ್ನೇ ಆಯ್ಕೆ ಮಾಡಿಕೊಳ್ಳುವಂತೆ ಹಲವರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯನವರ ಪುತ್ರ ಯತೀಂದ್ರ, ತಮ್ಮ ತಂದೆ ವರುಣಾದಿಂದ ಸ್ಪರ್ಧಿಸುವುದಾದರೆ ತಾವು ಕ್ಷೇತ್ರ ಬಿಟ್ಟುಕೊಡಲು ಸಿದ್ದ ಎಂದು ಹೇಳಿದ್ದರು. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸಿದರೆ ಯತೀಂದ್ರ ಅವರನ್ನು ಲೋಕಸಭಾ ಅಭ್ಯರ್ಥಿಯನ್ನಾಗಿ ಮಾಡಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ.