ಇಂದು ಬೆಳಗ್ಗೆ ಭಾರತ್ ಜೋಡೋ ಯಾತ್ರೆ ಮಧ್ಯಪ್ರದೇಶದ ಮೂಲಕ ಸಾಗುತ್ತಿದ್ದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಅವರ ಕುಟುಂಬ ಸದಸ್ಯರು ಅವರ ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ.
ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಹೊರಟಿರುವ ಯಾತ್ರೆಯಲ್ಲಿ ಇದೇ ಮೊದಲ ಬಾರಿಗೆ ಉತ್ತರ ಪ್ರದೇಶದ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾಗವಹಿಸಿದ್ದಾರೆ.
ಪ್ರಿಯಾಂಕಾ ಮತ್ತು ರಾಹುಲ್ ಗಾಂಧಿ ಜೊತೆಯಾಗಿ ನಡೆಯುತ್ತಿರುವ ಚಿತ್ರವನ್ನು ಕಾಂಗ್ರೆಸ್ ಹಂಚಿಕೊಂಡಿದ್ದು, ನಾವು ಒಟ್ಟಿಗೆ ನಡೆದಾಗ ನಮ್ಮ ಹೆಜ್ಜೆಗಳು ಬಲವಾಗಿರುತ್ತವೆ ಎಂದು ಬರೆಯಲಾಗಿದೆ.
ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಅವರ ಪತಿ ರಾಬರ್ಟ್ ವಾದ್ರಾ ಯಾತ್ರೆ ಆರಂಭವಾದ ನಂತರ ಮೊದಲ ಬಾರಿಗೆ ಗುರುವಾರ ಭಾರತ್ ಜೋಡೋ ಯಾತ್ರೆಗೆ ಸೇರಿದರು. ಅವರ ಪುತ್ರ ರೈಹಾನ್ ವಾದ್ರಾ ಕೂಡ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
ಇಂದು ಬೆಳಿಗ್ಗೆ ಮಧ್ಯಪ್ರದೇಶದ ಬೋರ್ಗಾಂವ್ ಗ್ರಾಮದಿಂದ ಪುನರಾರಂಭಗೊಂಡ ಭಾರತ್ ಜೋಡೋ ಯಾತ್ರೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಸಹ ಭಾಗಿಯಾಗಿದ್ದಾರೆ. ಹಿರಿಯ ನಾಯಕರಾದ ಕಮಲ್ ನಾಥ್ ಮತ್ತು ದಿಗ್ವಿಜಯ ಸಿಂಗ್ ಕೂಡ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.