ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಸಂಪೂರ್ಣ ಕಣ್ಣು ತಪಾಸಣೆ ನಡೆಸುವುದರ ಜೊತೆಗೆ ಅವರುಗಳಿಗೆ ಕನ್ನಡಕ ವಿತರಿಸಲು ಚಿಂತನೆ ನಡೆಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಈ ವಿಷಯ ತಿಳಿಸಿದ್ದಾರೆ.
ಭಾನುವಾರದಂದು ತಾಲೂಕು ಆಸ್ಪತ್ರೆ ಉನ್ನತೀಕರಿಸುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ನೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಈಗ ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿಸಿ ಮೇಲ್ದರ್ಜೆಗೆ ಏರಿಸಲಾಗುತ್ತದೆ. ಅಲ್ಲದೆ 60ಕ್ಕೂ ಹೆಚ್ಚಿನ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆರಂಭಿಸಲಾಗುತ್ತದೆ ಎಂದು ಹೇಳಿದರು.
ಮುಖ್ಯಮಂತ್ರಿಗಳ ಆರೋಗ್ಯ ಸೇವೆ ಯೋಜನೆಗೆ ಹಾವೇರಿ ಸೇರಿದಂತೆ ರಾಜ್ಯದ ಐದು ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದ್ದು, ಒಂದು ಕೋಟಿಗೂ ಅಧಿಕ ಜನರಿಗೆ ಈ ವರ್ಷ ಆಯುಷ್ಮಾನ್ ಕಾರ್ಡ್ ವಿತರಿಸಲಾಗುತ್ತದೆ ಎಂದು ಹೇಳಿದರು. ಅಲ್ಲದೆ ರಾಜ್ಯದಲ್ಲಿ 12 ಹೊಸ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಹಾಗೂ ಡಿಸೆಂಬರ್ ನಲ್ಲಿ 437 ‘ನಮ್ಮ ಕ್ಲಿನಿಕ್’ ಆರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.