ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್. ವಿಶ್ವನಾಥ್ ಮತ್ತೆ ಕಾಂಗ್ರೆಸ್ ನತ್ತ ವಾಲಿದ್ದಾರೆ.
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದ ವಿಶ್ವನಾಥ್ ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ.
ಸಿದ್ದರಾಮಯ್ಯ ಭೇಟಿಯ ನಂತರ ಮಾತನಾಡಿದ ವಿಶ್ವನಾಥ್, ರಾಜಕಾರಣ ನಿಂತ ನೀರಲ್ಲ. ರಾಜ್ಯ ರಾಜಕಾರಣದಲ್ಲಿ ಹಲವು ವಿದ್ಯಮಾನ ನಡೆಯುತ್ತಿದ್ದು, ಮುಂದೆ ಏನಾಗುತ್ತದೆ ಎಂದು ಯಾರಿಗೆ ಗೊತ್ತು? ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಮತ್ತು ನಾನು ಬಹಳ ವರ್ಷ ಒಟ್ಟಿಗೆ ರಾಜಕಾರಣದಲ್ಲಿದ್ದವರು. ಅವರ ಆರೋಗ್ಯ ವಿಚಾರಿಸಲು ಭೇಟಿ ಮಾಡಿದ್ದೆ. ಅಭಿಮಾನದಿಂದ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಅಭಿನಂದನೆ ತಿಳಿಸಿದ್ದೇನೆ ಯಾವುದೇ ರಾಜಕಾರಣದ ವಿಷಯ ಮಾತನಾಡಿಲ್ಲ ಎಂದು ವಿಶ್ವನಾಥ್ ಹೇಳಿದ್ದಾರೆ.
ಬಿಜೆಪಿಯೊಂದಿಗೆ ಮನಿಸಿಕೊಂಡಿರುವ ವಿಶ್ವನಾಥ್ ಮರಳಿ ಕಾಂಗ್ರೆಸ್ ನತ್ತ ಮುಖ ಮಾಡಿದ್ದು, ಇದಕ್ಕೆ ಪೂರ್ವಭಾವಿಯಾಗಿ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ ಎನ್ನಲಾಗಿದ್ದು, ರಾಜಕಾರಣ ನಿಂತ ನೀರಲ್ಲ ಎಂದು ವೀಶ್ವನಾಥ್ ಅವರು ಹೇಳಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.