ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲ ಇನ್ನೂ ಮುಂದುವರೆದಿದೆ. ಈ ನಡುವೆ ಕೋಲಾರದಿಂದ ಸ್ಪರ್ಧೆಗೆ ಮುಂದಾಗಿದ್ದ ಸಿದ್ದರಾಮಯ್ಯ ಇದೀಗ ಮತ್ತೆ ವರುಣದತ್ತ ಮುಖ ಮಾಡಿದ್ದು, ವರುಣದಿಂದಲೇ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ತಂದೆ ಆಗಮನದಿಂದಾಗಿ ಮಗ ಡಾ.ಯತೀಂದ್ರ ಸಿದ್ದರಾಮಯ್ಯ ಅಲರ್ಟ್ ಆಗಿದ್ದು, ಕ್ಷೇತ್ರಾದ್ಯಂತ ಸಂಚಾರ ನಡೆಸಿದ್ದಾರೆ. ಪ್ರತಿದಿನ ಕ್ಷೇತ್ರದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ ಅವರ ಅಹವಾಲು ಸ್ವೀಕರಿಸಿ ಅಧಿಕಾರಿಗಳಿಗೂ ಸ್ಥಳದಲ್ಲೇ ಸಮಸ್ಯೆ ಬಗೆಹರಿಸುವಂತೆ ತಾಕೀತು ಮಾಡಿದ್ದಾರೆ.
ನಂಜನಗೂಡು ತಾಲೂಕಿನ ಗ್ರಾಮ ಪಂಚಾಯತಿ ವ್ಯಾಪ್ತಿಯ ರೈತರನ್ನು ಭೇಟಿಯಾದ ಯತೀಂದ್ರ ಸಿದ್ದರಾಮಯ್ಯ, ರೈತರ ಸಮಸ್ಯೆಗಳನ್ನು ಖುದ್ದು ಆಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಒಟ್ಟಾರೆ ಸಿದ್ದರಾಮಯ್ಯ ವರುಣ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಕ್ಷೇತ್ರಾದ್ಯಂತ ಶಾಸಕ ಯತೀಂದ್ರ ಮಿಂಚಿನ ಸಂಚಾರ ಕೈಗೊಂಡಿದ್ದಾರೆ.