ಹಾಸನ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ಬಣ ರಾಜಕೀಯ ತಾರಕಕ್ಕೇರಿದೆ. ಜಿಲ್ಲಾ ಘಟಕದ ಅಧ್ಯಕ್ಷರ ನೇಮಕ ವಿರೋಧಿಸಿ ಕೈ ಕಾರ್ಯಕರ್ತರೆ ಜಿಲ್ಲಾಧ್ಯಕ್ಷರ ವಿರುದ್ಧ ಪ್ರತಿಭಟನೆ ನಡೆಸಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಜಿಲ್ಲಾ ಕಾಂಗ್ರೆಸ್ ಘಟಕದಲ್ಲಿ ಎಲ್ಲವೂ ಸರಿಯಲ್ಲ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಹಾಸನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಣ ಲಕ್ಷ್ಮಣ್ ಅವರನ್ನು ನೇಮಕ ಮಾಡಿದ್ದೇ ಸಿದ್ದರಾಮಯ್ಯ ಬಣದ ಅಸಮಾಧಾನಕ್ಕೆ ಕಾರಣವಾಗಿದೆ. ಇದೇ ಅಸಮಾಧಾನ ಪ್ರತಿಭಟನೆಗೆ ಕಾರಣವಾಗಿದೆ.
ಕಳೆದ 7 ತಿಂಗಳ ಹಿಂದಷ್ಟೇ ಲಕ್ಷ್ಮಣ್ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದು, ಅಲ್ಲದೇ ಆರ್ ಎಸ್ ಎಸ್ ಹಿನ್ನೆಲೆಯುಳ್ಳವರಾಗಿದ್ದಾರೆ. ಇತ್ತೀಚೆಗೆ ಪಕ್ಷಕ್ಕೆ ಸೇರಿದ ಲಕ್ಷ್ಮಣ್ ಅವರಿಗೆ ಇದೀಗ ಜಿಲ್ಲಾಧ್ಯಕ್ಷ ಪಟ್ಟ ನೀಡಿರುವುದು ಸಿದ್ದರಾಮಯ್ಯ ಬಣದವರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿಂದೆ ಸಿದ್ದರಾಮಯ್ಯ, ಪಟೇಲ್ ಶಿವಪ್ಪ ಅವರ ನೇಮಕ ಮಾಡುವಂತೆಯೂ ಸೂಚಿಸಿದ್ದರು. ಇದೀಗ ಸಿದ್ದರಾಮಯ್ಯ ಸೂಚನೆಗೆ ಗಮನ ಕೊಡದೇ ಲಕ್ಷ್ಮಣ್ ಅವರಿಗೆ ಜಿಲ್ಲಾಧ್ಯಕ್ಷ ಪಟ್ಟ ನೀಡಲಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹಾಸನ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಲಕ್ಷ್ಮಣ್ ಅವರನ್ನು ಕೆಳಗಿಳಿಸುವಂತೆ ಒತ್ತಾಯಿಸಿದ್ದಾರೆ.